ಮಂಡ್ಯ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. 67 ವರ್ಷಗಳ ನಂತರ ಬಳ್ಳಾರಿಗೆ ಸಾಹಿತ್ಯ ಸಮ್ಮೇಳನ ನಡೆಸುವ ಅವಕಾಶ.!
ಶನಿವಾರ ರಾತ್ರಿ ಮಂಡ್ಯದ ಖಾಸಗಿ ಹೋಟೆಲ್ ನಲ್ಲಿ ನಡೆದ ಎಲ್ಲಾ ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ ಪ್ರತಿನಿಧಿಗಳ ಸಭೆಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲೇ ನಡೆಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ.
ಕಳೆದ ಸಲ 87ನೇ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಗೆ ನೀಡಬೇಕೆಂಬ ಒತ್ತಾಯವಿದ್ದು, ಕೊನೆ ಗಳಿಗೆಯಲ್ಲಿ ಮಂಡ್ಯದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಈ ಬಾರಿ ಚಿಕ್ಕಮಗಳೂರು, ಬಳ್ಳಾರಿ ಅಥವಾ ದೆಹಲಿಯಲ್ಲಿ ಸಮ್ಮೇಳನ ನಡೆಸುವ ಕುರಿತು ಚರ್ಚೆ ನಡೆದಿದ್ದು, ಅಂತಿಮವಾಗಿ ಬಳ್ಳಾರಿಯಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.
1926 ಮತ್ತು 1938 ರಲ್ಲಿ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು. ಸ್ವಾತಂತ್ರ್ಯ ನಂತರ 1958 ರಲ್ಲಿ ವಿ.ಕೃ. ಗೋಕಾಕ್ ಅಧ್ಯಕ್ಷತೆಯಲ್ಲಿ ಬಳ್ಳಾರಿ ಮುನ್ಸಿಪಲ್ ಕಾಲೇಜ್ ಮೈದಾನದಲ್ಲಿ ಸಾಹಿತ್ಯ ಸಮ್ಮೇಳನ ಜರುಗಿತ್ತು. 67 ವರ್ಷಗಳ ಬಳಿಕ ಬಳ್ಳಾರಿಗೆ ಮತ್ತೆ ಅವಕಾಶ ದೊರೆತಿದೆ.