ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಲ್ಲಿರುವ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬನನ್ನು ಮತ್ತೊಬ್ಬ ವಿದ್ಯಾರ್ಥಿ ಇರಿದು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ.
ಯೂಸುಫ್‌ಪುರ್ ಮುಹಮ್ಮದಾಬಾದ್ ನಿವಾಸಿಯಾದ ಆದಿತ್ಯ ವರ್ಮಾ ಹತ್ಯೆಯಾದ 10ನೇ ತರಗತಿ ವಿದ್ಯಾರ್ಥಿ. ಇತರೆ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಿಂದ ಶಾಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ವಿದ್ಯಾರ್ಥಿಯನ್ನು ಆಸ್ಪತ್ರೆಗೆ ರವಾನಿಸಿದರು. ವೈದ್ಯರು ಪರೀಕ್ಷಿಸಿ ವಿದ್ಯಾರ್ಥಿ ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಪೊಲೀಸರ ಪ್ರಕಾರ, ಆದಿತ್ಯ ಶಾಲೆಯ 9ನೇ ತರಗತಿ ವಿದ್ಯಾರ್ಥಿಯೊಂದಿಗೆ ಜಗಳವಾಡಿದ್ದನು. ಇದಾದ ನಂತರ, ಆ ವಿದ್ಯಾರ್ಥಿ ಆದಿತ್ಯನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ರವಾನಿಸಲಾಯಿತು, ಅಲ್ಲಿ ವೈದ್ಯರು ಪರೀಕ್ಷೆ ನಡೆಸಿ ಆದಿತ್ಯ ಮೃತಪಟ್ಟಿರುವುದಾಗಿ ಘೋಷಿಸಿದರು.
ಪೊಲೀಸರು ಆರೋಪಿಯಾಗಿರುವ ಅಪ್ರಾಪ್ತ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ. ಇಡೀ ಪ್ರಕರಣದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇತರ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಘಾಜಿಪುರ ನಗರ ಎಸ್ಪಿ ಜ್ಞಾನೇಂದ್ರ ನಾಥ್ ಪ್ರಸಾದ್ ತಿಳಿಸಿದ್ದಾರೆ.