ನವದೆಹಲಿ: ಗೋವಾ ಮತ್ತು ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕಾರಣಿ ಸಭೆಯ ಬಳಿಕ ಇದೀಗ ಸಿಡಬ್ಲ್ಯೂ ಸಿ ಸಭೆ ದೆಹಲಿಗೆ ಶಿಫ್ಟ್ ಆಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಣಿ ಇನ್ನು ಸ್ವಲ್ಪ ಹೊತ್ತಿನಲ್ಲೇ ಶುರುವಾಗಲಿದೆ. ರಾಷ್ಟ್ರರಾಜಧಾನಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಣಿಯಲ್ಲಿ ಪ್ರಮುಖವಾಗಿ ಜಾತಿ ಸಮೀಕ್ಷೆ ವಿಷಯವೇ ಚರ್ಚೆಗೆ ಬರಲಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಯವರಿಂದಿಗೆ ಮಹತ್ವದ ಚರ್ಚೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ರಾತ್ರಿಯೇ ದೆಹಲಿಗೆ ಆಗಮಿಸಿದ್ದು, ಜಾತಿ ಜನಗಣತಿ ವಿಷಯವನ್ನು ಪ್ರಸ್ತಾಪಿಸಲಿದ್ದಾರೆಂದು ಹೇಳಲಾಗುತ್ತಿದೆ. “ಇಂಡಿಯಾ” ಒಕ್ಕೂಟದ ಸದಸ್ಯ ರಾಜ್ಯವಾದ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಈಗಾಗಲೇ ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡಿದ್ದು, ಶೇ.62 ರಷ್ಟು ಜನ ಒಬಿಸಿ ವರ್ಗಕ್ಕೆ ಸೇರಿದವರೆಂಬ ವಿಷಯ ಬಹಿರಂಗವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯ ಬಹು ಚರ್ಚಿತ ವಿಷಯವಾಗಿ ಮಾರ್ಪಟ್ಟಿದೆ. ಇನ್ನು, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ, ತೆಲಂಗಾಣ ರಾಜ್ಯಗಖ ವಿಧಾನಸಭೆ ಚುನಾವಣೆಗಳು ಹತ್ತಿರ ಬಂದಿದ್ದು, ಈ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲು ಕಾರ್ಯತಂತ್ರ ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ಇಂದು ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಮಹತ್ವದ್ದಾಗಿದ್ದು, ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಮತ್ತಿತರ ಪಕ್ಷದ ಪ್ರಮುಖರು ಈಗಾಗಲೇ ದೆಹಲಿಗೆ ಆಗಮಿಸಿದ್ದಾರೆ.