ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕೂಡಲೇ ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಪಾಠ ಪ್ರವಚನ ಸ್ಥಗಿತಗೊಳಿಸಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸೇವಾನಿರತ ಪದವೀಧರ ಶಿಕ್ಷಕರನ್ನು ‘ಪದವೀಧರ ಶಿಕ್ಷಕರು’ ಎಂದು ಪರಿಗಣಿಸಬೇಕು. ಹೊಸ 2016 ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪೂರ್ವಾನ್ವಯಗೊಳಿಸಬಾರದು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತಕ್ಷಣವೇ ಮುಖ್ಯೋಪಾಧ್ಯಾಯರ ಹುದ್ದೆಗೆ ಬಡ್ತಿ ನೀಡಬೇಕು ಎಂಬುದಾಗಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ನಾಗೇಶ್ ತಿಳಿಸಿದ್ದಾರೆ.


































