ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆ ಮೂಡ್ನಿಂದ ಇನ್ನೂ ಹೊರ ಬಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಇನ್ನೂ ವಿಧಾನಸಭೆ ಚುನಾವಣೆ ಅಂತಾನೆ ತಿಳಿದುಕೊಂಡಿದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಆದರೆ ಮುಖ್ಯಮಂತ್ರಿಗಳು ಯಾವುದೋ ಒಂದು ರಾಜಕಾರಣದ ಬಗ್ಗೆ ಮಾತಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಚರ್ಚೆಗಳನ್ನು ಮಾಡುವುದಿಲ್ಲ ಎಂದು ಟೀಕಿಸಿದ್ದಾರೆ.
ಬರ ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೀಡಿರುವ ಸೂಚನೆ ವಿಚಾರವಾಗಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಕೇಂದ್ರದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿಲ್ಲ. ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು ಎಂದಿದೆ. ನಾವು ಸೌಹಾರ್ದಯುತವಾಗಿಯೇ ಇದ್ದೇವೆ. ಗಮನ ಬೇರೆಡೆ ಸೆಳೆಯಲು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಹೋಗಿದೆ ಎಂದರು.