ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ಮಾನ್ಯ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್ ತಿಳಿಸಿದೆ ಎಂದು ವಿಶ್ಲೇಷಿಸಿದರು.
ಹೈಕೋರ್ಟ್‍ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಗೌರವಾನ್ವಿತ ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟಿದ್ದರು. ಕಾಂಗ್ರೆಸ್ಸಿಗರು ಗೌರವಾನ್ವಿತ ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್ ಎಂದು ಆಕ್ಷೇಪಿಸಿದ್ದರು ಎಂದು ಟೀಕಿಸಿದರು.
ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಿರಂತರ ಹೋರಾಟ ನಡೆಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡಿದ್ದೆವು. ನಂತರ ಸ್ವತಃ ಸಿಎಂ ಕುಟುಂಬವೇ ಫಲಾನುಭವಿಗಳಾಗಿರುವ ಮೈಸೂರಿನ ಮುಡಾ ಹಗರಣ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದೆವು. ಬೆಂಗಳೂರು- ಮೈಸೂರು ಪಾದಯಾತ್ರೆಯನ್ನು ನಡೆಸಿ ಬಿಜೆಪಿ- ಜೆಡಿಎಸ್ ಒಟ್ಟಾಗಿ ಯಶಸ್ವಿ ಹೋರಾಟ ಮಾಡಿದ್ದಾಗಿ ವಿವರಿಸಿದರು.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ