ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಕ್ಟೋಬರ್ 3ರ ಇಂದು ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ.
ಬೆಳಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡುವರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ. ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ರಾಝ್ಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸುವರು.
ಇಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.
ಅಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ. ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ.