ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿಗೆ ದೊರೆತಿರುವ ಮಧ್ಯಂತರ ಜಾಮೀನು ತೆರವಿಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ಅನುಮತಿ ಕೇಳಲಾಗಿತ್ತು. ಸರ್ಕಾರದಿಂದ ಅನುಮತಿ ದೊರೆತಿದ್ದು, ಸದ್ಯದಲ್ಲೇ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಡಿ ಬಂಧನಕ್ಕೊಳಗಾಗಿ 4 ತಿಂಗಳುಗಳ ಸೆರೆವಾಸ ಅನುಭವಿಸಿದ್ದ ನಟ ದರ್ಶನ್ ಅವರಿಗೆ ವೈದ್ಯಕೀಯ ಕಾರಣಗಳಿಂದ 6 ವಾರಗಳ ಕಾಲ ಹೈಕೋರ್ಟಿನಂದ ಮಧ್ಯಂತರ ಜಾಮೀನು ದೊರೆತಿತ್ತು. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಅಕ್ಟೋಬರ್ 30ರಂದು ದರ್ಶನ್ ಅವರಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ಆದೇಶಿಸಿತ್ತು.