ಜಲಜೀವನ್ ಮಿಷನ್: ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಗೋವಿಂದ ಎಂ ಕಾರಜೋಳ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ : ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಯೋಜನೆ ಅನುಷ್ಠಾನ ಕಾರ್ಯವನ್ನು ಜಿಲ್ಲೆಯಲ್ಲಿ ತ್ವರಿತವಾಗಿ  ಪೂರ್ಣಗೊಳಿಸಬೇಕು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೈಗೊಂಡಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯು ಗುಣಮಟ್ಟದಿಂದ ಕೂಡಿಲ್ಲ ಎಂಬ ದೂರುಗಳು ಕೇಳಿಬಂದಿವೆ.  ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದಾಗ ಮಾತ್ರ ಗುಣಮಟ್ಟದ ಕಾಮಗಾರಿ ಆಗಲು ಸಾಧ್ಯ. ಹಾಗಾಗಿ ಅಧಿಕಾರಿಗಳು ಕಾಮಗಾರಿ ಗುಣಮಟ್ಟದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಗೆ ಸುಮಾರು 4 ಸಾವಿರ ಕೋಟಿ ರೂ. ಅನುದಾನ ಮಂಜೂರಾಗಿದ್ದು, ಸರ್ಕಾರದ ಅನುದಾನ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ ಅವರು,  ಕೆಲಸ ಸರಿಯಾಗಿ ಮಾಡದ ಕಂಟ್ರಾಕ್ಟರ್‍ಗಳ ಬದಲಾವಣೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಲಜೀವನ ಮಿಷನ್ ಯೋಜನೆಯಿಂದಾಗಿ ಹಳ್ಳಿಗಳಲ್ಲಿ ಹೊಸ ಚರಂಡಿ ನಿರ್ಮಾಣ ಆಗಿದೆ. ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಿಲ್ಲ. ಈ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಜಲಜೀವನ ಮಿಷನ್ ಯೋಜನೆಯ ಕಾಮಗಾರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಜಲಜೀವನ ಮಿಷನ್ ಯೋಜನೆಯ  ಕಾಮಗಾರಿ ಗುಣಮಟ್ಟದ ಕುರಿತು ಹೆಚ್ಚಿನ ಗಮನಹರಿಸಬೇಕು. ತಾಲ್ಲೂಕುವಾರು ಕಂಟ್ರಾಕ್ಟರ್‍ಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಆರ್‍ಡಬ್ಲ್ಯೂಎಸ್ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್ ಅವರಿಗೆ ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್ ಮಾತನಾಡಿ, ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 6 ತಾಲ್ಲೂಕಿನಲ್ಲಿ ಬ್ಯಾಚ್ 1, 2, 3 ಮತ್ತು 4ರಲ್ಲಿ ಒಟ್ಟು 1568 ಕಾಮಗಾರಿಗಳನ್ನು ಕೈಗೊಂಡಿದ್ದು, 1568 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. ಇದರಲ್ಲಿ 685 ಕಾಮಗಾರಿಗಳು ಪೂರ್ಣಗೊಂಡಿದ್ದು, 798 ಕಾಮಗಾರಿಗಳು ಪ್ರಗತಿಯಲ್ಲಿವೆ. ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದರು.

ಜಿಲ್ಲೆಯ ಎಲ್ಲ ಜನವಸತಿಗಳಿಗೆ ಶಾಶ್ವತ ಕುಡಿಯುವ ನೀರಿನ ಮೂಲದ ಮೂಲಕ ಸುರಕ್ಷಿತ ನೀರು ಪೂರೈಸಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಒಟ್ಟು 11 ಯೋಜನೆಗಳು ಅನುಮೋದನೆಗೊಂಡಿದ್ದು, ಅನುಮೋದಿತ ಯೋಜನೆಗಳ ಪೈಕಿ 02 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಂಡಿದ್ದು, 02 ಯೋಜನೆಗಳು ಮುಕ್ತಾಯದ ಹಂತದಲ್ಲಿದ್ದು, ಬಾಕಿ 07 ಯೋಜನೆಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿದ್ದು, ತುರ್ತಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಬೇಸಿಗೆಯಲ್ಲಿ ರೈತರಿಗೆ ವಿದ್ಯುತ್ ಸಮಸ್ಯೆ ಆಗದಿರಲಿ: ಜಿಲ್ಲೆಯ ರೈತರು ಬೇಸಿಗೆ ಬೆಳೆ ಬೆಳೆಯಲು ಹೆಚ್ಚಿನ ವಿದ್ಯುತ್ ಹಂಚಿಕೆಗೆ ಪ್ರಸ್ತಾವನೆ ಸಲ್ಲಿಸಬೇಕು.  ಬೇಸಿಗೆಯಲ್ಲಿ ರೈತರಿಗೆ ವಿದ್ಯುತ್ ಸಮಸ್ಯೆ ಆಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸಂಸದರು ಸೂಚನೆ ನೀಡಿದರು.

ಕಳೆದ ವರ್ಷ  ಮಳೆ ಕೊರತೆಯಿಂದಾಗಿ ವಿದ್ಯುತ್ ಬಳಕೆ ಕಡಿಮೆಯಾಗಿತ್ತು. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಕೆರೆ, ಕಟ್ಟೆಗಳು ಭರ್ತಿಯಾಗಿದ್ದು, ಅಂತರ್ಜಲ ವೃದ್ಧಿಯಾಗಿದೆ. ಹಾಗಾಗಿ ಜಿಲ್ಲೆಯ ರೈತರು ಬೇಸಿಗೆ ಬೆಳೆ ಬೆಳೆಯಲು ವಿದ್ಯುತ್ ಸಮಸ್ಯೆ ಆಗಬಾರದು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon