ಬೆಂಗಳೂರು : ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಎಚ್.ಕೆ. ಪಾಟೀಲ್ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುತ್ತಿದೆ. ಕರಾವಳಿಯಲ್ಲಿ ಪ್ರವಾಸೋದ್ಯಮದ ಬೆಳವಣಿಗೆಯಿಂದ ಪ್ರಕೃತಿ ಸಂಪತ್ತಿನ ಸದ್ಬಳಕೆಯಾಗುವುದರ ಜತೆಗೆ ಹೆಚ್ಚಿನ ಬಂಡವಾಳ ಹರಿದುಬಂದು, ಉದ್ಯೋಗ ಸೃಷ್ಟಿಗೆ ಸಹಕಾರಿ ಎಂದು ಹೇಳಿದರು.
ಇದೇ ವೇಳೆ ಉಪಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ವರದಿಗಳು ಸುಳ್ಳಾಗಲಿದೆ. ಆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.