ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿದೆ. ಕೇಂದ್ರ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿಯೇ ತನ್ನ ನೌಕರರಿಗೆ ತುಟ್ಟಿಭತ್ಯೆ ಏರಿಕೆ ಮಾಡಿತ್ತು.
ಸಂಪ್ರದಾಯದಂತೆ ಕೇಂದ್ರ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬಳಿಕ ರಾಜ್ಯ ಸರ್ಕಾರ ಶೇಖಡ 2.25 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿತ್ತು. ನೌಕರರ ಸಂಘದ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಶೇಖಡ 2.25 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿದೆ.
ಜುಲೈ 1, 2024 ರಿಂದ 8.50% ರಿಂದ 10.75% ತುಟ್ಟಿ ಭತ್ಯೆ ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳು ಆಗಸ್ಟ್ 1, 2024 ರಿಂದ ಅನ್ವಯವಾಗುತ್ತವೆ. ತುಟ್ಟಿ ಭತ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ ಸಲ್ಲಿಸಿದೆ.