ನವದೆಹಲಿ :ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್ ಸಂಸದೆಯಾಗಿ ಇಂದು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಈ ವೇಳೆ ಪ್ರಿಯಾಂಕಾ ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದಿದ್ದರು. ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು. ಇತ್ತೀಚೆಗೆ ಪ್ರಕಟಗೊಂಡ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ, ಆ ಮೂಲಕ ಪ್ರಪ್ರಥಮ ಬಾರಿಗೆ ಚುನಾಯಿತ ಪ್ರತಿನಿಧಿಯಾಗಿದ್ದಾರೆ.
ರಾಹುಲ್ ಗಾಂಧಿ ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು.ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಲೋಕಸಭೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರೆ, ತಾಯಿ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದಾರೆ.