ಬೆಂ. ಗ್ರಾ. ಜಿಲ್ಲೆ : ಭಾರತವು ಜನಸಂಖ್ಯೆಯಲ್ಲಿ ಶೇ. 60 ರಷ್ಟು ಯುವಕರಿಂದ ಕೂಡಿದ ದೇಶ. ನಮ್ಮ ಯುವಶಕ್ತಿಯೇ ಭಾರತ ದೇಶದ ನಿಜವಾದ ಆಸ್ತಿ. ಶಾಲಾ-ಕಾಲೇಜು ಹಂತದಲ್ಲೇ ಯುವ ಸಮೂಹಕ್ಕೆ ಕೌಶಲ್ಯಭರಿತ ಶಿಕ್ಷಣ ನೀಡುವ ಕೆಲಸ ಆಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ನವದೆಹಲಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಜಿಲ್ಲಾ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಟಮಕ ಕೋಲಾರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೇವನಹಳ್ಳಿ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ದೇಶದಾದ್ಯಂತ ಯುವಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡು ಯುವ ಜನತೆಗೆ ಸಾಂಸ್ಕೃತಿಕ, ಕಲಾತ್ಮಕವಾಗಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು. ಕೇಂದ್ರ ಸರ್ಕಾರವು ಯುವ ಸಮೂಹದ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನೂ ಜಾರಿಗೆ ತಂದಿದೆ. ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ವಿದ್ಯಾಲಕ್ಷ್ಮೀ ಯೋಜನೆಗಳ ಮೂಲಕ ಕೌಶಲ್ಯ ತರಬೇತಿ ಹಾಗೂ ಉನ್ನತ ಶಿಕ್ಷಣಕ್ಕೆ ಸಾಲ-ಸೌಲಭ್ಯಗಳನ್ನು ಒದಗಿಸುತ್ತಿದೆ. ಸರ್ಕಾರದ ಯೋಜನೆಗಳನ್ನು ಯುವ ಸಮೂಹ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ವಿವಿಧ ಇಲಾಖೆಗಳಲ್ಲಿನ ಯೋಜನೆಗಳ ಮಾಹಿತಿ ನೀಡಲು ಮಳಿಗೆಗಳನ್ನು ತೆರೆಯಲಾಗಿತ್ತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್., ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿ.ಪಂ ಮುಖ್ಯ ಯೋಜನಾ ಅಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಟಿ. ಜಯಲಕ್ಷ್ಮೀ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಮಂಜಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸ್ಪರ್ಧಾತಿ ಯುವಕ-ಯುವತಿಯರು ಭಾಗವಹಿಸಿದ್ದರು.