‘ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು’ – ಸಿಎಂ ಭರವಸೆ

WhatsApp
Telegram
Facebook
Twitter
LinkedIn

ಬೆಂಗಳೂರು :ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.

ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ

ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ , ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸುತ್ತಿದ್ದೇವೆ ಎಂದರು.

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ

ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತಿ ಮಾಹೆ 1000 ರೂ. ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿ ಪ್ರಸಕ್ತ ಸಾಲಿನಿಂದ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ ರೂ. 2 ಕೋಟಿ ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ.

ಇದಲ್ಲದೇ ಇನ್ನೂ 13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಅನುದಾನಕ್ಕೆ ಒಳಪಡಿಸಲಾಗಿದೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಅವಲಂಬಿತರಿಗೆ ನೀಡಲಾಗುವ ಮರಣ ಪರಿಹಾರ ನಿಧಿಯನ್ನು 2023ನೇ ಸಾಲಿನಲ್ಲಿ ರೂ. 50,000/- ದಿಂದ ಪರಿಷ್ಕರಿಸಿ ರೂ.1.00 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ‘ಸಿ’ ಮತ್ತು ‘ಡಿ’ ಸಮೂಹದ ಹುದ್ದೆಗಳಲ್ಲಿ ಶೇ.5 ಹಾಗೂ ‘ಎ’ ಮತ್ತು ‘ಬಿ’ ಹುದ್ದೆಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಅಲ್ಲದೇ ಇವರು ನಿರ್ವಹಿಸಬಹುದಾದಂತಹ ಹುದ್ದೆಗಳನ್ನು ಗುರುತಿಸಲು ರಾಜ್ಯ ಮಟ್ಟದಲ್ಲಿ ತಜ್ಞರ ಸಮತಿಯನ್ನು ರಚಿಸಲಾಗಿದ್ದು ಇಲಾಖೆಗಳಲ್ಲಿನ ಹುದ್ದೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ವಿಕಲಚೇತನರ ಅನುಕೂಲಕ್ಕಾಗಿ ವಾಹನಗಳನ್ನು ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

 

BC Suddi   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon