ಚಿತ್ರದುರ್ಗ: ವಿಕಲಚೇತನರಿಗೆ ಅನುಕಂಪ ತೋರಿಸುವುದಕ್ಕಿಂತ ಮುಖ್ಯವಾಗಿ ನಾವು ಅವಕಾಶ ಕಲ್ಪಿಸಿಕೊಡಬೇಕು. ಆಗ ಮಾತ್ರ ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ತರಾಸು ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಹಾಗೂ ವಿವಿದೋದ್ದೇಶ ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಸಹಯೋಗದಲ್ಲ್ಲಿ ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ ಎಂಬ ಘೋಷವಾಕ್ಯದೊಂದಿಗೆ “ವಿಶ್ವ ವಿಕಲಚೇತನರ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಕಲಚೇತನರಿಗೆ ಅವಕಾಶ ಕೊಡದೇ ವಂಚಿತರನ್ನಾಗಿ ಮಾಡಬಾರದು. ಯಾವುದೇ ಕಾರಣಕ್ಕೂ ವಿಕಲಚೇತನರು ಎದೆಗುಂದಬಾರದು. ಉತ್ಸಾಹ, ಛಲ, ಧೈರ್ಯ, ಕಠಿಣ ಪರಿಶ್ರಮವಿದ್ದರೆ ಸಾಧನೆ ಮಾಡುವುದು ಕಷ್ಟವೇನಲ್ಲ. ಪ್ಯಾರಾ ಒಲಂಪಿಕ್, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಕಲಚೇತನರು ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ಸಾಧನೆ ಮಾಡಿರುವ ಉದಾಹಣೆಗಳಿವೆ ಎಂದು ಹೇಳಿದರು.
ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಶೈಕ್ಷಣಕ, ಸಾಮಾಜಿಕ, ಆರ್ಥಿಕ ಹಾಗೂ ಉದ್ಯೋಗದಲ್ಲಿಯೂ ಮೀಸಲಾತಿ ಮತ್ತು ಅವಕಾಶಗಳನ್ನು ಕಲ್ಪಿಸಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್ ರಾಘವೇಂದ್ರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ. ಮಾತನಾಡಿದರು. ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ದಿನಕರ್, ವಿಕಲಚೇತನರ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪವಿತ್ರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ ಸೇರಿದಂತೆ ವಿವಿದೋದ್ದೇಶ, ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ವಿಕಲಚೇತನರು ಇದ್ದರು.