ಚಿತ್ರದುರ್ಗ: ಅಪರಾಧ ತಡೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಬಳಿ ಶುಕ್ರವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಗೃತಿ ಮೂಡಿಸುವ ಟ್ಯಾಬ್ಲೊಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಅಪರಾಧಗಳ ಸಂಖ್ಯೆ ಇಳಿಕೆಗೆ ಪೊಲೀಸ್ ಇಲಾಖೆ ಹಲವು ರೀತಿಯಲ್ಲಿ ಶ್ರಮಿಸುತ್ತಿದೆ. ಇದರ ಜೊತೆಗೆ ಅಪರಾಧ ತಡೆಗೆ ಸಾರ್ವಜನಿಕರಲ್ಲಿಯೂ ಅರಿವು ಹಾಗೂ ಸಹಕಾರ ಅಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗಲು ಸಾಧ್ಯವಾಗುತ್ತದೆ. ಈ ರೀತಿಯ ಪ್ರಕರಣಗಳು ಕಂಡುಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅಥವಾ 1930 ಗೆ ಸಂಪರ್ಕಿಸಬಹುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಪ್ರತಿ ವರ್ಷ ಡಿಸೆಂಬರ್ ಮಾಹೆಯಲ್ಲಿ ಅಪರಾಧ ತಡೆ ಮಾಸಾಚರಣೆ ರಾಜ್ಯಾದ್ಯಂತ ಆಚರಿಸಲಾಗುತ್ತದೆ. ಅದರಂತೆ ಜಿಲ್ಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಟ್ರಾಫಿಕ್ ಸಂಬಂಧಿತ, ಡ್ರಗ್ಸ್ ಹಾಗೂ ಸೈಬರ್ ಅಪರಾಧ ಸೇರಿದಂತೆ ಇನ್ನಿತರೆ ಅಪರಾಧಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಚಿತ್ರದುರ್ಗ, ಚಳ್ಳಕೆರೆ ಹಾಗೂ ಹಿರಿಯೂರು ಉಪವಿಭಾಗಗಳ ಪ್ರತಿಯೊಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಸ್ತಬ್ದ ಚಿತ್ರ ವಾಹನಗಳೊಂದಿಗೆ ಜಾಗೃತಿ ಮೂಡಿಸಲಾಗುವುದು. ಇದರ ಜೊತೆಗೆ ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅಪರಾಧ ತಡೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.