ಬೆಂಗಳೂರು: ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿ 15ಕ್ಕೆ ಮುಂದೂಡಿದೆ.
ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಕೈಗೆತ್ತಿಕೊಂಡರು. ವಿಚಾರಣೆ ವೇಳೆ ಹಾಜರಾಗಿದ್ದ ಸಿದ್ದರಾಮಯ್ಯ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಪರ ವಕೀಲರು, ಎರಡು ದಿನಗಳ ಹಿಂದೆಯಷ್ಟೇ ನೋಟಿಸ್ ಜಾರಿಯಾಗಿದೆ. ಅದಕ್ಕೆ ಆಕ್ಷೇಪಣೆ ಸಿದ್ದಪಡಿಸಬೇಕಾಗಿದೆ. ಆದ್ದರಿಂದ ಅರ್ಜಿಯ ವಿಚಾರಣೆಯನ್ನು ಮುಂದೂಡಬೇಕು ಎಂದು ಮನವಿ ಮಾಡಿದರು. ಸಿದ್ದರಾಮಯ್ಯ ಪತ್ನಿ ಪರ ಹಾಜರಿದ್ದ ವಕೀಲರು, ನೋಟಿಸ್ ತಲುಪಿದೆ. ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.