ಬಳ್ಳಾರಿ : ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ಮತ್ತೊಂದು ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಸರ್ಕಾರಕ್ಕೆ ಜಿಲ್ಲಾಡಳಿತ ಆಡಿಟ್ ರಿಪೋರ್ಟ್ ಸಲ್ಲಿಸಿದ್ದು, ಇದರಲ್ಲಿ ಜಿಲ್ಲೆಯಲ್ಲಿ ಕಳೆದ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಏಪ್ರಿಲ್ ತಿಂಗಳಿನಿಂದ ಈವರೆಗೂ 23 ಬಾಣಂತಿಯರು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆ, ವಿಮ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿಯರು ಸಾವನ್ನಪ್ಪಿರುವ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ಹೆರಿಗೆ ಸಂದರ್ಭದಲ್ಲಿ ಬಾಣಂತಿಯರಿಗೆ ಅಪೌಷ್ಟಿಕತೆ, ಅನಿಮಿಯಾ ಇತರೆ ಕಾಯಿಲೆಗಳು ಕಾಡುತ್ತಿವೆ. ಹೀಗಾಗಿ ಸಿಜೇರಿಯನ್ ಆಗುವ ಬಾಣಂತಿಯರೇ ಹೆಚ್ಚು ಸಾವನ್ನಪ್ಪುತ್ತಿದ್ದಾರೆ. ಬಾಣಂತಿಯರ ಸಾವಿಗೆ ಕಡಿವಾಣ ಹಾಕಲು ವಿಶೇಷ ಕ್ರಮ ಕೈಗೊಳ್ಳುತ್ತೇವೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.