ಚಿತ್ರದುರ್ಗ: ಇದೇ ಡಿ.29 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪೊಬೆಷನರ್ಸ್ 384 ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ವ್ಯವಸ್ಥಿವಾಗಿ ಪರೀಕ್ಷಾ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ಈ ಕುರಿತು ನಗರದ ಜಿ.ಪಂ. ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆ ನಿರ್ವಹಣೆ ಕಾರ್ಯ ಅತಿ ಸೂಕ್ಷ್ಮವಾದದ್ದು, ಅಭ್ಯರ್ಥಿಗಳ ಭವಿಷ್ಯ ಇದರಲ್ಲಿ ಅಡಗಿದೆ. ಅಕ್ರಮಗಳಿಗೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆಯಿಂದ, ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಬಂಡಲ್ಗಳನ್ನು ಕೊಂಡೊಯ್ಯಲು ನೇಮಿಸಿರುವ ಮಾರ್ಗಾಧಿಕಾರಿಗಳು ಸರಿಯಾದ ಸಮಯಕ್ಕೆ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದು, ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಒಎಂಆರ್ ಬಂಡಲ್ಗಳನ್ನು ಅಂಚೆ ಮೂಲಕ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳುಹಿಸಿಕೊಡಬೇಕು. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಬಳಿ ಇರುವ ಅಂಚೆ ಕಚೇರಿಗಳು ಒಎಂಆರ್ ಬಂಡಲ್ಗಳು ತಲುಪುವವರೆಗೂ ತಪ್ಪದೇ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.
ಜಾಮರ್ ಅಳವಡಿಕೆ:
ಮೊಬೈಲ್ ಬ್ಲೂಟೂತ್ ಮತ್ತು ಇತರೆ ಆಧುನಿಕ ಸಂವಹನ ಉಪಕರಣಗಳನ್ನು ಬಳಸಿ ಪರೀಕ್ಷೆಯಲ್ಲಿ ಅಕ್ರಮಗಳನ್ನು ಎಸಗುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಮಾಡಲಾಗುವುದು. ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಇದರೊಂದಿಗೆ ಫೇಸ್ ರೆಕಗ್ನೈಸೇಷನ್ ಹಾಗೂ ಬಯೋಮೆಟ್ರಿಕ್ ಹಾಜರಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕವಾದ ಸಿಬ್ಬಂದಿ ಕೈಗೊಳ್ಳುವರು. ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ತಪಾಸಣೆಗೆ ಒಳಪಡಿಸಬೇಕು. ಇದಕ್ಕಾಗಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಫ್ರಿಸ್ಕಿಂಗ್ ತಂಡಗಳನ್ನು ರಚಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಮರು ಪರೀಕ್ಷೆ ಪ್ರವೇಶ ಪತ್ರ :
384 ಗೆಜೆಟೆಡ್ ಪೊಬೆಷನರ್ಸ್ ಹುದ್ದೆಗಳ ನೇಮಕಾತಿಗೆ ಕಳೆದ ಆ.27 ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಡಿ.29 ರಂದು ಮತ್ತೊಮ್ಮೆ ಮರು ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಕೆ.ಪಿ.ಎಸ್.ಸಿ ವೆಬ್ ಸೈಟ್ ಮೂಲಕ ಹೊಸದಾಗಿ ಮರು ಪರೀಕ್ಷೆ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಹೊಸ ಪ್ರವೇಶ ಪತ್ರದಲ್ಲಿ ನಮೂದಿಸಲಾಗಿರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಬೇಕು. ತಪ್ಪದೇ ಕೆ.ಪಿ.ಎಸ್.ಸಿ ಸೂಚಿಸಿರುವ ಎಲ್ಲಾ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭ್ಯರ್ಥಿಗಳಿಗೆ ಸೂಚನೆ ನೀಡಿದ್ದಾರೆ.