ಚಿತ್ರದುರ್ಗ : ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇದೇ ಜ.18 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿ.ವಿ ಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.
ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ವಾಣಿವಿಲಾಸ ಸಾಗರ ಜಲಾಶಯದ ಬಾಗಿನ ಅರ್ಪಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
120 ವರ್ಷಗಳಲ್ಲಿ ಮೂರನೇ ಬಾರಿಗೆ ವಾಣಿವಿಲಾಸ ಸಾಗರ ಜಲಾಶಯ ತುಂಬಿದೆ. ಜ.18ರಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಗಮಿಸಿ, ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದು, ಸುಮಾರು 20 ರಿಂದ 24 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಜಿಲ್ಲೆಯ ಜನರು ಕುತೂಹಲ ಹಾಗೂ ಕಾತುರರಾಗಿದ್ದು, ಜಿಲ್ಲೆಯ ಪಾಲಿಗೆ ಇದೊಂದು ಸಂಭ್ರಮದ ಕ್ಷಣವಾಗಲಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ತಮಗೆ ವಹಿಸಿದ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಮುಗಿದ ನಂತರವೂ ಸಹ ನಾವು ವಿವಿಸಾಗರ ಜಲಾಶಯ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಗಮನಹರಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಸಮರ್ಪಣೆಗಾಗಿ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಅಧಿಕಾರಿಗಳು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಹೇಳಿದರು.