ದಾವಣಗೆರೆ: ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಬಜೆಟ್ನಲ್ಲಿ ಅನುಮೋದನೆ ನೀಡಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಅವರು ಶುಕ್ರವಾರ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಸರ್ಕಾರದ ಅನುದಾನ ಸೇರಿ ರೂ.3.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿ 76 ಸಾವಿರದಷ್ಟು ಶಾಲೆಗಳಿದ್ದು 1.08 ಕೋಟಿ ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದು ಒಟ್ಟು ನೌಕರರಲ್ಲಿ ಶೇ 37 ರಷ್ಟು ಸಿಬ್ಬಂದಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 57 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕೊರತೆಯೂ ಇದ್ದು ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಜೊತೆಗೆ ದಾನಿಗಳಿಂದ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಮ್ಮ ಶಾಲೆ, ನಮ್ಮ ಜವಾಬ್ದಾರಿ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ ಎಂದರು.
ಪೌಷ್ಟಿಕತೆ ಹೆಚ್ಚಿಸಲು ಪ್ರತಿನಿತ್ಯ ಮೊಟ್ಟೆ; ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರತಿನಿತ್ಯ ಮೊಟ್ಟೆ ನೀಡಲಾಗುತ್ತಿದೆ. ಇದರಲ್ಲಿ ಆಜೀಂ ಪ್ರೇಂಜೀ ಪೌಂಢೇಷನ್ನಿಂದ ನಾಲ್ಕು ದಿನ, ಸರ್ಕಾರದಿಂದ 2 ದಿನ ಮೊಟ್ಟೆ ನೀಡಲಾಗುತ್ತಿದ್ದು ಸ್ಥಳೀಯವಾಗಿ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತಿದೆ.
ಎಲ್ಲ ದಿನವೂ ಮೊಟ್ಟೆ ನೀಡಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟ ಅವರು ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಮತ್ತು ಪೋಷಕರೊಂದಿಗೆ ಮಕ್ಕಳನ್ನು ಕರೆದುಕೊಂಡು ಹೋಗದೆ ಶಾಲೆಗೆ ಕಳುಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಪ್ರತಿ ದಿನದ ಹಾಜರಾತಿಗೆ ರೂ.1 ರಂತೆ ಮಕ್ಕಳಿಗೆ ನೀಡಲಾಗುತ್ತಿತ್ತು, ನಂತರ ಮಧ್ಯಾಹ್ನ ಊಟ ನೀಡುತ್ತಾ ಬಂದು ಈಗ ಹಾಲು, ಮೊಟ್ಟೆಯನ್ನು ನೀಡಲಾಗುತ್ತಿದೆ. ಭವಿಷ್ಯದ ಪ್ರಜೆಗಳಾಗುವ ಮಕ್ಕಳು ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆದು ದೇಶದ ಆಸ್ತಿಯಾಗಬೇಕು ಮತ್ತು ಸಂವಿಧಾನ ಉಳಿಯಲು ಎಲ್ಲರೂ ಶಿಕ್ಷಣವಂತರಾಗಬೇಕೆಂದರು.