ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ತೆಂಗೌಪಾಲ್ ಜಿಲ್ಲೆಗಳಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಫೆ.10ರಂದು ಇಂಫಾಲ ಪಶ್ಚಿಮ ಜಿಲ್ಲೆಯ ರೂಪಮಹಲ್ ಟ್ಯಾಂಕ್ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆ ಕಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷಕ್ಕೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ತೆಂಗೌಪಾಲ್ ಜಿಲ್ಲೆಯಲ್ಲಿ ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ, ನಿಷೇಧಿತ ಸಂಘಟನೆಗಳಾದ ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (ಕೊಯಿರೆಂಗ್) ಮತ್ತು ಪ್ರೆಪಾಕ್ಗೆ ಸೇರಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಬಂಧಿಸಿದೆ.
ಉಗ್ರರು ಸುಲಿಗೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಬಂಧಿತರಿಂದ ಪಿಸ್ತೂಲ್ಗಳು, ಮದ್ದುಗುಂಡುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.