ಬೆಂಗಳೂರು: ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎಂದು ಪ್ರಕರಣ ದಾಖಲಾಗಿದೆ. ಅತ್ಯಾಚಾರ ಆರೋಪದಡಿ ಉತ್ತರ ಭಾರತ ಮೂಲದ ಮೂವರು ಆರೋಪಿಗಳನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರಕ್ಕೆ ಒಳಗಾದ ಮಹಿಳೆಯು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕೃತ್ಯ ಸಂಬಂಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಪಶ್ಚಿಮ ಬಂಗಾಳ ಹಾಗೂ ಉತ್ತರಾಖಂಡ್ ಮೂಲದ ಅಜಿತ್, ವಿಶ್ವಾಸ್ ಹಾಗೂ ಶಿವು ಎಂಬುವರನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೋರ್ವ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಮೂಲದ ವಿವಾಹಿತ ಸಂತ್ರಸ್ತೆಯು ಮದುವೆ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ವೆಲ್ ಕಮ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದರು. ಸ್ನೇಹಿತೆಯನ್ನು ಭೇಟಿ ಮಾಡಲು ನಿನ್ನೆ ರಾತ್ರಿ ಕೋರಮಂಗಲ ಬಳಿ ಬರುವಾಗ ನಾಲ್ವರು ಆರೋಪಿಗಳು ಪರಿಚಯಸ್ಥರಂತೆ ಮಾತನಾಡಿ, ಆಕೆಯನ್ನು ಪುಸಲಾಯಿಸಿ ಹೊಟೇಲ್ ವೊಂದರ ಮೇಲೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಇಂದು ನಸುಕಿನ ಜಾವ ಆಕೆ ಬಳಿಯಿದ್ದ ಹಣ ಹಾಗೂ ಮೊಬೈಲ್ ಕಸಿದು ಪರಾರಿಯಾಗಿದ್ದರು. ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಕೃತ್ಯದ ಕುರಿತು ಸಂತ್ರಸ್ತೆ ಮಾಹಿತಿ ನೀಡಿದ್ದರು. ಈ ಬಗ್ಗೆ ಕೋರಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ಷಿಪ್ರಗತಿಯಲ್ಲಿ ಮೂವರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತರೆಲ್ಲರೂ ಹೊಟೇಲ್ ವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.ಪ್ರಕರಣ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾತನಾಡಿ, ‘ಮಹಿಳೆ ಮೇಲೆ ಅತ್ಯಾಚಾರವೆಸಗಿದ ಸಂಬಂಧ ಮೂವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. ಸ್ನೇಹಿತೆಯನ್ನು ಭೇಟಿ ಮಾಡಲು ಮಹಿಳೆಯನ್ನು ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ಸದ್ಯ ಸಂತ್ರಸ್ತೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯು ಗುಣಮುಖರಾದ ಬಳಿಕ ಹೇಳಿಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದಿದ್ಧಾರೆ.