ಜಮ್ಮು: ಮಾತಾ ವೈಷ್ಣೋದೇವಿ ದೇಗುಲದಿಂದ ಹಿಂತಿರುಗುತ್ತಿದ್ದ ಬಸ್ ಶನಿವಾರ ಸಂಜೆ ಜಮ್ಮು ಬಳಿ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಅಪಘಾತದಲ್ಲಿ ಚಾಲಕ ಸಾವನ್ನಪ್ಪಿದ್ದು, 17 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯುಕೆ-07ಪಿಎ-5640 ನೋಂದಣಿ ಸಂಖ್ಯೆಯನ್ನು ಹೊಂದಿರುವ ಬಸ್ ದೆಹಲಿಗೆ ತೆರಳುತ್ತಿದ್ದಾಗ ಜಮ್ಮು ಬಸ್ ನಿಲ್ದಾಣದಿಂದ ಸುಮಾರು ಎಂಟು ಕಿಲೋಮೀಟರ್ ದೂರದಲ್ಲಿರುವ ಮಂದಾ ಬಳಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿರುವು ಪಡೆಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ಹೇಳಲಾಗಿದೆ. ಗಾಯಗೊಂಡ 17 ಪ್ರಯಾಣಿಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಗಾಯಾಲುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸ್ಸಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಂತರ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಸಂಚಾರ ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಜಂಟಿಯಾಗಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಶ್ರಮಿಸಿ ಮೃತದೇಹವನ್ನು ಹೊರತೆಗೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ಯಾತ್ರಾರ್ಥಿಗಳು ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದವರು ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ಮುಖ್ಯಮಂತ್ರಿ ಅಬ್ದುಲ್ಲಾ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.