ಬೆಂಗಳೂರು : ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟೀಸ್ ಮಾಡುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಿಧಾನಪರಿಷತ್‍ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ ಸಂಜೆ 4 ಗಂಟೆವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು.