ವಿಶಾಖಪಟ್ಟಣಂ: ಆಂಧ್ರಪ್ರದೇಶದ ಅನಕಪಲ್ಲಿಯ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸಂಭವಿಸಿದೆ.
ಮೃತಪಟ್ಟ ೮ ಮಂದಿಯ ಪೈಕಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಈ ಅವಘಡದಲ್ಲಿ ಹಲವಾರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅನಕಪಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅನಕಪಲ್ಲಿಯ ಎಸ್‌ಪಿ ಮಾಹಿತಿ ನೀಡಿದ್ದಾರೆ.
ಘಟನೆ ಬಗ್ಗೆ ಆಂಧ್ರಪ್ರದೇಶ ಸಿ.ಎಂ ಚಂದ್ರಬಾಬು ನಾಯ್ಡು ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಗೃಹ ಸಚಿವೆ ವಿ. ಅನಿತಾ ಅವರನ್ನು ಕಳುಹಿಸಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ. ಪರಿಹಾರ ಕಾರ್ಯಾಚರಣೆ ನಡೆಯುತ್ತಿದ್ದು, ತನಿಖೆ ಬಳಿಕವೇ ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.