ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಬಿಸಿಸಿಐ 2025 ರ ಐಪಿಎಲ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಬೆನ್ನಲ್ಲೇ ಕ್ರಿಕೆಟಿಗ ವಿರಾಟ್ ಕೊಹ್ಲಿ ಭಾರತೀಯ ಸೇನೆ ಪರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
”ಈ ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುತ್ತಿರುವುದಕ್ಕಾಗಿ ಭಾರತೀಯ ಸೇನೆಗೆ ಸೆಲ್ಯೂಟ್. ನಾವು ನಮ್ಮ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮ ವೀರ ಯೋಧರ ಅಚಲ ಧೈರ್ಯ, ಅವರು ಮತ್ತು ಅವರ ಕುಟುಂಬದವರು ನಮ್ಮ ದೇಶಕ್ಕಾಗಿ ಮಾಡುವ ತ್ಯಾಗಗಳಿಗೆ ನಾವು ಸದಾ ಕೃತಜ್ಞರಾಗಿರುತ್ತೇವೆ” ಎಂದು ವಿರಾಟ್ ಕೊಹ್ಲಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಇನ್ನು 2025 ರ ಐಪಿಎಲ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಬೆನ್ನಲ್ಲೇ ಆರ್‌ಸಿಬಿ ಫ್ರ್ಯಾಂಚೈಸಿ ಕೂಡ ಬಿಸಿಸಿಐ ನಿರ್ಧಾರಕ್ಕೆ ಬೆಂಬಲ ಸೂಚಿಸಿದೆ. “ಈ ರಾಷ್ಟ್ರೀಯ ಬಿಕ್ಕಟ್ಟಿನ ಸಮಯದಲ್ಲಿ, ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಧೈರ್ಯ ಮತ್ತು ಶೌರ್ಯಕ್ಕೆ ನಾವು ನಮಸ್ಕರಿಸುತ್ತೇವೆ ಮತ್ತು ಭಾರತದ ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇವೆ. ಜೈ ಹಿಂದ್!” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.