ಚೆನ್ನೈ: ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಎಲ್ಲಾ ರಾಜಕೀಯ ಪಕ್ಷಗಳು ಈ ಕುರಿತು ಸಿದ್ಧತೆಗಳನ್ನು ಚುರುಕುಗೊಳಿಸುತ್ತಿದೆ. ಇದರ ನಡುವೆ ತಮಿಳುನಾಡು ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ (TVK) ಶುಕ್ರವಾರ ದೊಡ್ಡ ಘೋಷಣೆಯೊಂದನ್ನು ಮಾಡಿದೆ.
2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ-ರಾಜಕಾರಣಿ ವಿಜಯ್ ಅವರನ್ನು ಆಯ್ಕೆ ಮಾಡಲಾಗಿದೆ.
ಶುಕ್ರವಾರ ಪಕ್ಷದ ಮುಖಂಡರ ಸಮ್ಮುಖದಲ್ಲಿ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ವಿಜಯ್ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು.
ಇದಾದ ಬಳಿಕ ಮಾತನಾಡಿದ ವಿಜಯ್, ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಬಲಗೊಳಿಸುವುದು ನಮ್ಮ ಜವಾಬ್ದಾರಿಯಾಗಿದೆ ಅದಕ್ಕಾಗಿ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ.
2024 ರಲ್ಲಿ ಔಪಚಾರಿಕವಾಗಿ ಟಿವಿಕೆ ಪಕ್ಷವನ್ನು ಪ್ರಾಂಭಿಸಿದ ವಿಜಯ್, 2024 ರ ಲೋಕಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದ ಅವರು 2026 ರಲ್ಲಿ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು, ಅದರಂತೆ ಇಂದು ನಡೆದ ಸಭೆಯಲ್ಲಿ ವಿಜಯ್ ಅವರನ್ನೇ ಪಕ್ಷದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಒಮ್ಮತದಿಂದ ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮೈತ್ರಿ ಇಲ್ಲ ಏಕಾಂಗಿ ಸ್ಪರ್ಧೆ:
ಟಿವಿಕೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಮತ್ತು ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂದು ಸಭೆಯಲ್ಲಿ ಹೇಳಲಾಯಿತು. ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸುದ್ದಿಗಳು ಹರಡಿತ್ತು ಆದರೆ ಇದೀಗ ಅಧಿಕೃತ ಹೇಳಿಕೆ ಹೊರ ಬಿದ್ದಿದೆ.