ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ಇಂದು ಚಿಕ್ಕಮಂಗಳೂರು ಜಿಲ್ಲೆಯ 6 ತಾಲೂಕುಗಳು ಹಾಗೂ ಶಿವಮೊಗ್ಗದ 2 ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಆರು ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ಹಾಗು ಎನ್ ಆರ್ ಪುರ ತಾಲೂಕಿನಲ್ಲಿ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಅದೇ ರೀತಿಯಾಗಿ ಶಿವಮೊಗ್ಗದಲ್ಲೂ ಸಹ ವರುಣ ಅಬ್ಬರಿಸುತ್ತಿದ್ದು, ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ ಮತ್ತು ಹೊಸನಗರ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿ ಮಳೆ ಮುಂದುವರೆದಿದ್ದು ಮುಂಜಾಗ್ರತ ಕ್ರಮವಾಗಿ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.