ನವದೆಹಲಿ :ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಪ್ರತಿಯೊಬ್ಬ ಪ್ರಜೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವುದು ಅತ್ಯಗತ್ಯ. ನಮ್ಮ ಸಂವಿಧಾನ ಸಾಮಾಜಿಕ ನ್ಯಾಯವನ್ನು ಬೆಂಬಲಿಸುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸಮಾನತೆಯೆಂಬುದು ದೇಶದಲ್ಲಿ ಸ್ಥಾಪಿತವಾಗಿದೆಯೇ ಎಂಬ ಬಗ್ಗೆ ತಿಳಿದುಕೊಳ್ಳಲು ಇಂತಹ ಸಮೀಕ್ಷೆ ನಡೆಸಲೇಬೇಕಾಗುತ್ತದೆ. ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಬೇಕೆಂಬುದು ರಾಹುಲ್ ಗಾಂಧಿಯವರು ಬದ್ಧರಾಗಿದ್ದಾರೆ. ಕೇವಲ ಜಾತಿಗಣತಿ ಮಾಡುವ ಜೊತೆಗೆ ಆರ್ಥಿಕ ಸಾಮಾಜಿಕ ಸಮೀಕ್ಷೆ ನಡೆಸಿದಾಗ ಮಾತ್ರ, ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ. ಇದು ಭಾಗೀಧಾರಿ ನ್ಯಾಯ ಸಮ್ಮೇಳನದ ಮೂಲ ಉದ್ದೇಶ ಎಂದು ವಿವರಿಸಿದರು. ಮುಂದಿನ ದಿನಗಳಲ್ಲಿ ದೇಶದೆಲ್ಲೆಡೆ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಸಮೀಕ್ಷೆ ಕೇವಲ ಓಬಿಸಿ ವರ್ಗಕ್ಕೆ ಸಂಬಂಧಿಸಿದ್ದಲ್ಲ
ಏಐಸಿಸಿನ ಓಬಿಸಿ ಸಲಹಾ ಮಂಡಳಿಯಲ್ಲಿ ನಾನು ಓರ್ವ ಸದಸ್ಯನಾಗಿದ್ದು, ಜುಲೈ 15 ಹಾಗೂ 16 ರಂದು ಬೆಂಗಳೂರಿನಲ್ಲಿ ಮಂಡಳಿಯ ಪ್ರಥಮ ಸಭೆ ನಡೆದಿತ್ತು. ಎಐಸಿಸಿಯ ಹಿಂದುಳಿದ ವರ್ಗಗಳ ವಿಭಾಗಕ್ಕೆ ಡಾ.ಅನಿಲ್ ಜೈಹಿಂದ್ ಅವರು ಮುಖ್ಯಸ್ಥರಾಗಿದ್ದಾರೆ. ಆ ಸಭೆಯಲ್ಲಿ ಬೆಂಗಳೂರು ಘೋಷಣೆ ಸೇರಿದಂತೆ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. 2015 ರಲ್ಲಿ ಸಾಮಾಜಿಕ ಆರ್ಥಿಕ ಸಮೀಕ್ಷೆಯನ್ನು ಪ್ರಾರಂಭಿಸಿದ ರಾಜ್ಯ ಕರ್ನಾಟಕ. 2018ರಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ ಜಾತಿಗಣತಿ ವರದಿಯನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಹತ್ತು ವರ್ಷಗಳ ಹಳೆಯ ಅಂಕಿಅಂಶಗಳಾದ್ದರಿಂದ ಕಾನೂನಿನನ್ವಯ ಮರುಗಣತಿ ಮಾಡುವ ಅಗತ್ಯವಿದ್ದುದ್ದರಿಂದ, ಸರ್ಕಾರ ಕರ್ನಾಟಕದಲ್ಲಿ ಮರುಗಣತಿ ಮಾಡಲು ಕ್ರಮ ಕೈಗೊಳ್ಳುತ್ತಿದೆ. ಇದೇ ರೀತಿ ಎಲ್ಲ ರಾಜ್ಯಗಳಲ್ಲಿಯೂ ತೆಲಂಗಾಣ ಮಾದರಿಯಲ್ಲಿ ಜಾತಿಗಣತಿಯನ್ನು ಮಾಡಬೇಕೆಂದು ನಿರ್ಣಯಿಸಲಾಯಿತು.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ಹಿಂದುಳಿದ ವರ್ಗದ ಏಳಿಗೆಯ ವಿಷಯವನ್ನು ಮುಂಚೂಣಿಗೆ ತಂದ ನಂತರವಷ್ಟೇ, ಕೇಂದ್ರ ಸರ್ಕಾರ ಜಾತಿಗಣತಿಯನ್ನು ತಾನು ಮಾಡುವುದಾಗಿ ಹೇಳಿದೆ. 1931 ನೇ ಇಸವಿಯ ನಂತರ ದೇಶದಲ್ಲಿ ಜಾತಿಗಣತಿ ನಡೆದಿಲ್ಲ.ಈ ಸಮೀಕ್ಷೆ ಕೇವಲ ಓಬಿಸಿ ವರ್ಗಕ್ಕೆ ಸಂಬಂಧಿಸಿದ್ದಲ್ಲ. ಕರ್ನಾಟಕ ಎಲ್ಲ ಏಳು ಕೋಟಿ ಜನರ ಸಮೀಕ್ಷೆ ನಡೆಯುತ್ತದೆ ಎಂದರು.
 
				 
         
         
         
															 
                     
                     
                     
                     
                    


































 
    
    
        