ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಆಪರೇಷನ್ ಅಖಾಲ್’ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ‘ಆಪರೇಷನ್ ಅಖಾಲ್’ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ ಭದ್ರತಾ ಪಡೆಗಳು ಓರ್ವ ಉಗ್ರನನ್ನ ಹತ್ಯೆಗೈದಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಯೋಧರು ಪ್ರತಿದಾಳಿ ನಡೆಸಿದ್ದಾರೆ. ರಾತ್ರಿಯಿಡೀ ಕಾರ್ಯಾಚರಣೆ ಮುಂದುವರಿದಿದ್ದು, ಘಟನಾ ಸ್ಥಳಕ್ಕೆ ಸ್ಥಳಿಯರು ಆಗಮಿಸದಂತೆ ಎಚ್ಚರಿಕೆ ನೀಡಲಾಗಿತ್ತು. ಈವರೆಗೆ ಓರ್ವ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ‘ಆಪರೇಷನ್ ಅಖಾಲ್’ ಮುಂದುವರಿದಿದೆ ಎಂದು ಸೇನೆಯ ಚಿನಾರ್ ಕಾರ್ಪ್ಸ್ ಹೇಳಿದೆ.