ಬೆಂಗಳೂರು :ಸಾಮಾಜಿಕ ಸಮಸ್ಯೆ ಹೋಗಲಾಡಿಸಲು ಹೊಸ ದಾರಿ ಹುಡುಕಿಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಗರದ ಮಾಣಿಕ್ ಷಾ ಮೈದಾನದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ವೇಳೆ, ನಾವೆಲ್ಲರೂ ಗಮನಿಸಿರುವ ಹಾಗೆ ನಮ್ಮ ಹೊಸ ತಲೆಮಾರು ಮೊಬೈಲ್ ಫೋನ್, ಇಂಟರ್ನೆಟ್ ಮುಂತಾದವುಗಳ ಭರಾಟೆಯಲ್ಲಿ ವಿಪರೀತ ತಲ್ಲಣಗಳನ್ನು ಎದುರಿಸುತ್ತಿದೆ. ಖಿನ್ನತೆ, ಆತಂಕ, ವಿನಾಕಾರಣ ಸಿಟ್ಟು, ದ್ವೇಷ ಮುಂತಾದ ಭಾವನೆಗಳಲ್ಲಿ ಸಿಲುಕಿ ಸಂಕಷ್ಟ ಪಡುತ್ತಿದೆ. ಈ ಸಾಮಾಜಿಕ ಸಮಸ್ಯೆಯನ್ನು ಹೋಗಲಾಡಿಸಲು ನಾವೆಲ್ಲರೂ ಸೇರಿ ಹೊಸ ದಾರಿಗಳನ್ನು ಹುಡುಕಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಮೊಬೈಲ್ ಬಿಡಿ -ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ ಎಂಬ ಕಾರ್ಯಕ್ರಮವನ್ನು ರೂಪಿಸಿದ್ದೇವೆ ಎಂದರು.
ಬ್ರಿಟೀಷ್ ಸಾಮ್ರಾಜ್ಯಶಾಹಿ ಆಳ್ವಿಕೆಯನ್ನು ಕಿತ್ತೆಸೆದು ಧೈರ್ಯ, ತ್ಯಾಗ, ಸ್ವರಾಜ್ಯದ ಸಂಕೇತ ಮತ್ತು ಸಮಸ್ತ ಶಕ್ತಿಯಾದ ತ್ರಿವರ್ಣ ಧ್ವಜವನ್ನು ಸಂಭ್ರಮದಿಂದ ಹಾರಿಸಲಾಯಿತು. ದೇಶವನ್ನು ದಾಸ್ಯದಿಂದ ಬಿಡುಗಡೆಗೊಳಿಸಲು ನಡೆದ ದೀರ್ಘಕಾಲದ ಹೋರಾಟದಲ್ಲಿ ಭಾಗವಹಿಸಿದ್ದ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಜವಾಹರ್ ಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಮುಂತಾದ ಎಲ್ಲಾ ಅಮರ ವೀರರನ್ನು ಧನ್ಯತಾಭಾವದಿಂದ ಸ್ಮರಿಸೋಣ ಎಂದರು.
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ದೋಂಡಿಯಾ ವಾಘ, ಹಲಗಲಿಯ ವೀರ ಬೇಡರು, ಮೈಲಾರ ಮಹಾದೇವಪ್ಪ, ಬೂದಿ ಬಸಪ್ಪ ನಾಯಕ ಮುಂತಾದವರು ಹಾಗೂ ಶ್ರೀರಂಗಪಟ್ಟಣ, ಸುರಪುರ, ಕಿತ್ತೂರು, ಈಸೂರು, ವಿಧುರಾಶ್ವತ್ಥ, ಶಿವಪುರ, ಅಂಕೋಲ ಮುಂತಾದ ಸ್ಥಳಗಳು ಬ್ರಿಟೀಷರನ್ನು ನಡುಗಿಸಿದ್ದವು. ಲಕ್ಷಾಂತರ ಜನರು ಸಕ್ರಿಯವಾಗಿ ಭಾಗವಹಿಸಿದ್ದರಲ್ಲದೆ ಸಾವಿರಾರು ಜನರು ಜೀವ ತ್ಯಾಗ ಮಾಡಿದ್ದಾರೆ. ಅವರೆಲ್ಲರನ್ನೂ ಕೃತಜ್ಞತಾ ಪೂರ್ವಕವಾಗಿ ಗೌರವಿಸೋಣ.
ಸ್ವಾತಂತ್ರ್ಯಾ ನಂತರ ದೇಶದ ರಕ್ಷಣೆಗಾಗಿ ನಡೆದ ಯುದ್ಧಗಳಲ್ಲಿ, ಸಂಘರ್ಷಗಳಲ್ಲಿ ಅಸಂಖ್ಯಾತ ಸೈನಿಕರು ಹುತಾತ್ಮರಾಗಿದ್ದಾರೆ. ಪ್ರಧಾನ ಮಂತ್ರಿಗಳಾಗಿದ್ದವರು ಸಹ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಕಟ್ಟಿ ಬೆಳೆಸುವ ಕೈಂಕರ್ಯದಲ್ಲಿ ಅಸಂಖ್ಯಾತ ಕಾರ್ಮಿಕರು, ರೈತರು, ವಿದ್ವಾಂಸರು, ವಿಜ್ಞಾನಿಗಳು, ಶಿಕ್ಷಕರು, ಹೋರಾಟಗಾರರೂ ಸೇರಿದಂತೆ ಸಮಸ್ತ ಉತ್ಪಾದಕ ವರ್ಗಗಳ ಜನರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಅವರೆಲ್ಲರನ್ನು ಈ ಸುಸಂದರ್ಭದಲ್ಲಿ ಸ್ಮರಿಸಲೇಬೇಕಾಗಿದೆ ಎಂದರು.
ಇತ್ತೀಚೆಗೆ ತಾನೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮಡಿದವರು ಹಾಗೂ ಆ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನಗಳ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ಎಲ್ಲರನ್ನೂ ಋಣಪೂರ್ವಕವಾಗಿ ದೇಶವು ನೆನಪಿಡುತ್ತದೆ. ಅವರೆಲ್ಲರ ಧೀರೋದಾತ್ತ ಹೋರಾಟವನ್ನು ವಿನೀತ ಭಾವದಿಂದ ತಲೆಬಾಗಿ ಗೌರವಿಸುತ್ತದೆ.