ಇಸ್ಲಾಮಿಕ್ ಶಾಲಾ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ 65 ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿರುವ ಘಟನೆ ಇಂಡೋನೇಷ್ಯಾದ ದ್ವೀಪ ಪ್ರದೇಶವಾದ ಜಾವಾದಲ್ಲಿ ನಡೆದಿರುವುದಾಗಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.
ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನಿರ್ಮಾಣ ಹಂತದಲ್ಲಿ ಕಟ್ಟಡ ಭಾಗಶಃ ಕುಸಿದು ಬಿದ್ದಿದ್ದು, ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿದ್ದು, ಇವರನ್ನು ರಕ್ಷಿಸಲು ತುಂಬಾ ಸಮಯ ತಗುಲಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಲ್ಲದೇ ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಕಟ್ಟಡ ನಿರ್ಮಾಣದಲ್ಲಿ ಮಾನದಂಡಗಳನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.