ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಈ ಹಿಂದೆ ನಿಗದಿ ಮಾಡಿದ್ದ ಅ.7ರ ಗಡುವನ್ನು ಐದು ದಿನಗಳ ಕಾಲ ಅಂದರೆ ಅ.12ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಮೀಕ್ಷೆಗೆ ಈ ಮೊದಲು ನಿಗದಿಪಡಿಸಿದ್ದ ಗಡುವು ಮಂಗಳವಾರಕ್ಕೆ ಮುಕ್ತಾಯಗೊಳ್ಳಲಿದ್ದು, ಅ.6ರವರೆಗೆ ಜಿಬಿಎ ಹೊರತುಪಡಿಸಿ 1.15 ಕೋಟಿ ಕುಟುಂಬಗಳ ಅಂದರೆ ಶೇ.80.39ರಷ್ಟು ಗಣತಿಯಷ್ಟೇ ಪೂರ್ಣಗೊಂಡಿತ್ತು.ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆಗೆ ತೀವ್ರ ಆಗ್ರಹ ವ್ಯಕ್ತವಾದ ಬೆನ್ನಲ್ಲೇ ಸಮೀಕ್ಷೆಯ ಗಡುವನ್ನು ಅ.12 ರವರೆಗೆ ವಿಸ್ತರಣೆ ಮಾಡಲಾಗಿದೆ.
ಇದಕ್ಕಾಗಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ತರಗತಿಗಳ ಸಮಯವನ್ನೂ ಬದಲಿಸಿದ್ದು, ಅ.8 ರಿಂದ ಅ.12 ರವರೆಗೆ ಶಾಲಾ ತರಗತಿಗಳನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಿರ್ವಹಿಸಬೇಕು. ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯ ನಿರ್ವಹಿಸುವುದು. ಸಮೀಕ್ಷೆಯನ್ನು ರಜಾ ದಿನಗಳಲ್ಲೂ ಕೈಗೊಂಡು ಅ.12ರ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಸೂಚನೆ ಮೇರೆಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಇನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅ.4 ರಿಂದ ಸಮೀಕ್ಷೆ ಶುರುವಾಗಿದ್ದು, ದಸರಾ ರಜೆಗಳು ಮುಗಿದಿರುವ ಹಿನ್ನೆಲೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲೂ ಅ.8 ರಿಂದ ಅ.24 ರವರೆಗೆ ಬೆಳಗ್ಗೆ 8 ರಿಂದ 1 ಗಂಟೆವರೆಗೆ ತರಗತಿಗಳನ್ನು ನಡೆಸಬೇಕು. ಬಳಿಕದ ಅವಧಿಯಲ್ಲಿ ಶಿಕ್ಷಕರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಜಿಬಿಎ ವ್ಯಾಪ್ತಿಯಲ್ಲಿ ಅ.24ರ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.