ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 2026 ರ ಮಾರ್ಚ್/ ಏಪ್ರಿಲ್ ನಲ್ಲಿ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆ-1 ನೋಂದಣಿಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲಾ ವಿದ್ಯಾರ್ಥಿಗಳ ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾಲೆಗಳ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳ ಮಾಹಿತಿಗಳನ್ನು ಶಾಲಾ ಲಾಗಿನ್ ಮೂಲಕ ಅಪ್ಲೋಡ್ ಮಾಡಲು ತಿಳಿಸಲಾಗಿದೆ.
ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ 710 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಬಾಲಕಿಯರು, ಪರಿಶಿಷ್ಟರು, ಆದಾಯ ಮಿತಿಗೆ ಒಳಪಟ್ಟು ವಿವಿಧ ಪ್ರವರ್ಗಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗಲು ಶೇಕಡ 75 ರಷ್ಟು ಹಾಜರಾತಿ ಹೊಂದಿರುವುದು ಕಡ್ಡಾಯವಾಗಿದೆ.
ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ಖಾಸಗಿ, ಪುನರಾವರ್ತಿತ ಅಭ್ಯರ್ಥಿಗಳಿಗೆ ಇಲಾಖೆ ನಿಯಮ ಸರಳೀಕರಣ ಮಾಡಿದೆ. ಈ ಮೊದಲು ವಯೋಮಿತಿ ಆಧಾರದಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕೆಂದರೆ ಅಭ್ಯರ್ಥಿಗಳು ಸಮೀಪದ ಸರ್ಕಾರಿ ಪ್ರೌಢಶಾಲೆ ಅಥವಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ನೋಂದಾಯಿಸಿಕೊಳ್ಳಬೇಕಿತ್ತು. ಈ ಬಾರಿ ಮೊಬೈಲ್ ನಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು.