ಬೆಂಗಳೂರು : ದೀಪಾವಳಿ ಹಬ್ಬ ಮುಗಿದ ನಂತರವೂ ಕರ್ನಾಟಕದಾದ್ಯಂತ ಇನ್ನೂ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಹಲವು ಭಾಗಗಳು ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದಾಗಿ ಹವಾಮಾನದಲ್ಲಿ ಬದಲಾವಣೆಯಾಗಿದೆ ಎಂದು ಇಲಾಖೆ ತಿಳಿಸಿದೆ. ಅಕ್ಟೋಬರ್ 27 ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಅಕ್ಟೋಬರ್ 25 ಮತ್ತು 26 ರಂದು ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕಕ್ಕೆ ಅಕ್ಟೋಬರ್ 26 ರಂದು ಯೆಲ್ಲೋ ಅಲರ್ಟ್ ಮತ್ತು ಅಕ್ಟೋಬರ್ 27 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಒಟ್ಟಾರೆಯಾಗಿ, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಬಹುತೇಕ ಖಚಿತ ಎಂದು ಹವಾಮಾನ ಇಲಾಖೆ ಸುಳಿವು ನೀಡಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತನ್ನ ವರದಿಯಲ್ಲಿ ಅಕ್ಟೋಬರ್ 24 ರಿಂದ ನವೆಂಬರ್ 2 ರ ನಡುವೆ ಕೃಷ್ಣಾ ನದಿ ಕಣಿವೆ ಪ್ರದೇಶದಲ್ಲಿ ಸಾಂದರ್ಭಿಕವಾಗಿ ವ್ಯಾಪಕದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ, ಹಾಗೂ ಅಕ್ಟೋಬರ್ 28 ರಂದು ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
































