ಪುಣೆ : ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನ.4 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.
ಆರೋಪಿಯು ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಅಲ್ಲದೇ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

































