ಬಿಹಾರ: ಯುಪಿಎಸ್‌ಸಿ ಪರೀಕ್ಷೆಯು ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಲಕ್ಷಾಂತರ ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಪ್ರಯತ್ನಿಸುತ್ತಾರೆ, ಆದರೆ ಕೆಲವೇ ಕೆಲವರು ತಮ್ಮ ಕನಸನ್ನು ನನಸಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಾರೆ. ಹೀಗೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ಜಯಾ ಸಹಾಯ್ ಅವರ ಯಶೋಗಾಥೆ ಇದು.
ಬಿಹಾರದ ಪೂರ್ಣಿಯಾ ಜಿಲ್ಲೆಯವರಾದ ಜಯಾ ಸಹಾಯ್ ಅವರು ಅರ್ಸ್ ಲೈನ್ ಸ್ಕೂಲ್‌ನಲ್ಲಿ ತಮ್ಮ ಆರಂಭಿಕ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ನಂತರ ಡಿಎವಿ ಪಬ್ಲಿಕ್ ಸ್ಕೂಲ್‌ನಲ್ಲಿ ಉನ್ನತ ಶಿಕ್ಷಣವನ್ನು ಪಡೆದರು. ಶಾಲಾ ಶಿಕ್ಷಣದ ನಂತರ, ಜಯಾ ಅವರು ದೆಹಲಿ ವಿಶ್ವವಿದ್ಯಾಲಯಕ್ಕೆ ಸೇರಿದರು. ಪದವಿ ಮತ್ತು ನಂತರ ಎಲ್‌ಎಲ್‌ಬಿ ಪದವಿಯನ್ನು ಪಡೆದರು.
ಶಿಕ್ಷಣ ಪೂರ್ಣಗೊಂಡ ನಂತರ, ಜಯಾ ಅವರು ತಮ್ಮ ಹುಟ್ಟೂರಿಗೆ ಹಿಂತಿರುಗಿದರು. ಯುಪಿಎಸ್‌ಸಿ ಪರೀಕ್ಷೆ ಬರೆಯಲು ನಿರ್ಧರಿಸಿದ ಅವರು ಸ್ವಯಂ-ಅಧ್ಯಯನವನ್ನು ಪ್ರಾರಂಭಿಸಿದರು. ಜಯಾ ಅವರು ತಮ್ಮ ಮೊದಲ ಎರಡು ಪ್ರಯತ್ನಗಳಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದರು. ಜಯಾ ಅವರು ತಮ್ಮ ಮೂರನೇ ಪ್ರಯತ್ನದಲ್ಲಿ, 860ನೇ ಅಖಿಲ ಭಾರತ ರ‍್ಯಾಂಕ್‌ನೊಂದಿಗೆ ಉತ್ತೀರ್ಣರಾಗುತ್ತಾರೆ. ಈ ಮೂಲಕ ಐಎಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾಗುತ್ತಾರೆ.































