ಚಿತ್ರದುರ್ಗ: ಮಕ್ಕಳ ಸೃಜನಾತ್ಮಕ, ಪಠ್ಯೇತರ ಚಟುವಟಿಕೆಗಳಿಗೆ ಬಾಲಭವನ ಕಾರ್ಯಕ್ರಮಗಳು ಪೂರಕವಾಗಿದೆ ಎಂದು ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಹೇಳಿದರು.
ಇಲ್ಲಿನ ಬುದ್ಧನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಪಠ್ಯಕ್ಕೆ ಪೂರಕವಾದ ಚಟುವಟಿಕೆಯಲ್ಲಿ ಆಸಕ್ತಿ ವಹಿಸಿ ಸಾಧಿಸಬೇಕಾಗಿದೆ. ಮಕ್ಕಳಿಗೆ ವಿದ್ಯೆ ಜೊತೆಗೆ ಶಿಸ್ತು ವಿನಯ ಸಂಯಮ ಕಲಿಯಲು ಬಾಲಭವನದ ಚಟುವಟಿಕೆಗಳು ಅವಶ್ಯಕವಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಬಾಲ ಭವನದ ಕಾರ್ಯಕ್ರಮ ಸಂಯೋಜಕ ಡಿ.ಶ್ರೀಕುಮಾರ್ ಮಾತನಾಡಿ, ರಾಜ್ಯ ಬಾಲ ಭವನ ಸೊಸೈಟಿ ಅಧ್ಯಕ್ಷ ಬಿ.ಆರ್.ನಾಯ್ಡು ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಮಕ್ಕಳಿಗೆ ವಿವಿಧ ಚಟುವಟಿಕೆಗಳ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾ ಮನೋಭಾವನೆ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕಿ ಗೀತಾ, ಶಿಕ್ಷಕರಾದ ಭಾಗ್ಯಮ್ಮ, ಉಮಾ ಹಾಗೂ ವಿದ್ಯಾರ್ಥಿಗಳು ಇದ್ದರು.

































