ಮೈಸೂರು : ಚಲಿಸುತ್ತಿದ್ದ ವೇಳೆಯಲ್ಲೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಗೆ ಸೇರಿದ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಹೊಸಳ್ಳಿ ಗೇಟ್ ಬಳಿ ನಡೆದಿದೆ.
ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ಸನ್ನು ಹೊಸಳ್ಳಿ ಗೇಟ್ ಬಳಿ ನಿಲ್ಲಿಸಿ, ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ.
ಪ್ರಯಾಣಿಕರನ್ನು ಇಳಿಸಿದ ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಿ, ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಈ ಕುರಿತು ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ.
































