ಬೆಂಗಳೂರು : ತಮಿಳುನಾಡು ಕರಾವಳಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಮತ್ತು ಮೈಸೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ತಮಿಳುನಾಡು ಕರಾವಳಿಯಲ್ಲಿ ಬಲಗೊಳ್ಳುತ್ತಿರುವ ಚಂಡಮಾರುತದ ಪ್ರಭಾವದಿಂದ ಶುಕ್ರವಾರ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ವಿವಿಧ ಪ್ರದೇಶಗಳಲ್ಲಿ ತಾಪಮಾನವು ಮತ್ತೆ ಕುಸಿಯುವ ನಿರೀಕ್ಷೆಯಿದ್ದು, ಇದು ಚಳಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಹೆಚ್ಚಿದೆ. ಕರಾವಳಿಯ ಇತರ ಭಾಗಗಳಲ್ಲೂ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಈ ಬಾರಿ ಕರ್ನಾಟಕದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನವು ಮತ್ತಷ್ಟು ಕುಸಿಯುತ್ತಿದ್ದು, ಕೆಲವು ಕಡೆಗಳಲ್ಲಿ ಶೀತಗಾಳಿಯಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಚಳಿ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂಜಾನೆ ಮತ್ತು ರಾತ್ರಿಯ ಸಮಯದಲ್ಲಿ ಜನರು ವಿಪರೀತ ಚಳಿಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ದಟ್ಟವಾದ ಮಂಜು ಕವಿದಿರುವುದರಿಂದ ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
































