ಬೆಂಗಳೂರು: ಹೌದು ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ 1ರ ಕೆಲವು ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪದವಿಪೂರ್ವ ಹಲವು ಬಿಗಿ ಕ್ರಮ ಕೈಗೊಂಡಿದೆ.
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಜನವರಿ 19 ರಿಂದ ಆರಂಭವಾಗುವ ಪೂರ್ವ ಸಿದ್ಧತಾ ಪರೀಕ್ಷೆ 2ರಲ್ಲಿ ಮತ್ತೆ ಇದೇ ರೀತಿಯ ಲೋಪಗಳಾಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ನೋಡಲ್ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರೆ ಆ ಕೇಂದ್ರದ ಪ್ರಾಂಶುಪಾಲರ ಮೇಲೆ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸುವ ಜೊತೆಗೆ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಳನ್ನು ವಾಟ್ಸಾಪ್ ಸೇರಿದಂತೆ ಯಾವುದೇ ಮಾಧ್ಯಮದಲ್ಲಿ ಬಹಿರಂಗಪಡಿಸಿದಲ್ಲಿ, ಪ್ರಸಾರ ಮಾಡಿದಲ್ಲಿ ವಿದ್ಯಾರ್ಥಿಗಳ ಮೇಲೆಯೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅನುದಾನಿತ ಕಾಲೇಜುಗಳು ಪ್ರಶ್ನೆ ಪತ್ರಿಕೆ ಬಹಿರಂಗಕ್ಕೆ ಕಾರಣವಾದಲ್ಲಿ ಕಾಲೇಜಿನ ಅನುದಾನ ಹಿಂಪಡೆಯಲು, ಪ್ರಶ್ನೆ ಪತ್ರಿಕೆ ಸೋರಿಕೆ ಪರೀಕ್ಷಾ ಕೇಂದ್ರದಲ್ಲಿ ನಡೆದರೆ ಅಂತಹ ಕೇಂದ್ರವನ್ನೇ ರದ್ದು ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಉಪ್ಪನಿರ್ದೇಶಕರು ಒಂದೇ ಐಪಿ ವಿಳಾಸ, ಒಂದೇ ಗಣಕಯಂತ್ರದಲ್ಲಿ ಮಾತ್ರವೇ ಡೌನ್ಲೋಡ್ ಮಾಡಬೇಕು. ತಪ್ಪಿದಲ್ಲಿ ಉಪನಿರ್ದೇಶಕರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು.































