ಚಿತ್ರದುರ್ಗ: ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಶುಕ್ರವಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಭೇಟಿ ಮಾಡಿ, ಸಂತ್ರಸ್ಥರ ಆರೋಗ್ಯ ವಿಚಾರಿಸಿದರು.
ಮಾರ್ಚ್ 19ರಂದು ಗುರುವಾರ ಸಂಜೆ ಸುಮಾರು 5.30ಕ್ಕೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ಅವರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿದರು. ಅವರೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯಕುಮಾರ್ ಅವರು ಉಪಸ್ಥಿತರಿದ್ದು, ಸಂತ್ರಸ್ತರ ಆರೋಗ್ಯದ ಸ್ಥಿತಿಗತಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.
































