ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.
ಮಧ್ಯಾಹ್ನ 2 ಗಂಟೆಗೆ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ಆರಂಭವಾಗಲಿದ್ದು, ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯ ಜನ ಆಗಮಿಸತೊಡಗಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಹ್ಲಾದ್ ಜೋಶಿ, ಹೆಚ್.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಬಿ.ವೈ. ರಾಘವೇಂದ್ರ, ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಸಿರಿಗೆರೆ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಮಾದಾರ ಚನ್ನಯ್ಯ ಮಠದ ಮಾದಾರ ಚನ್ನಯ್ಯ ಸ್ವಾಮೀಜಿ, ಭೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಬರುವ ಲಕ್ಷಾಂತರ ಮಂದಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ವಾಹನಗಳ ನಿಲುಗಡೆಗೆ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.




























