ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2026-27ನೇ ಸಾಲಿನ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
5 ರಿಂದ 10ನೇ ತರಗತಿ ಹಾಗೂ ಮೆಟ್ರಿಕ್ ನಂತರದ ಪಿಯುಸಿ, ಪದವಿ, ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://sw.kar.nic.in ನಲ್ಲಿ ಅಗತ್ಯ ದಾಖಲೆಗಳಾದ ಸ್ಯಾಟ್ಸ್ ನಂಬರ್, ಆಧಾರ್ ಕಾರ್ಡ್, ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ಬುಕ್, ಪಡಿತರ ಚೀಟಿ (ರೇಷನ್ ಕಾರ್ಡ್) ಹಾಗೂ 4 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಊಟ, ತಿಂಡಿ ಸೌಲಭ್ಯ, ಶುಚಿ ಸಂಭ್ರಮ ಕಿಟ್, ಶೂ ಮತ್ತು ಸಾಕ್ಸ್, ಸಮವಸ್ತ್ರ ಹಾಗೂ ಪ್ರತಿ ಮೂರು ತಿಂಗಳಿಗೊಮ್ಮೆ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರು ಅಥವಾ ಹೊಳಲ್ಕೆರೆಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು (ಗ್ರೇಡ್-2) ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.






























