ನವದೆಹಲಿ: ಮುಂದಿನ ಎರಡು ಮೂರು ದಿನಗಳಲ್ಲಿ ನೈರುತ್ಯ ಮುಂಗಾರು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮೊದಲು ಮೇ 26ಕ್ಕೆ ಮುಂಗಾರು ಕೇರಳ ಪ್ರವೇಶಿಸುವುದಾಗಿ ಹೇಳಲಾಗಿತ್ತು.
ಮುಂದಿನ ಎರಡು ಮೂರು ದಿನಗಳಲ್ಲಿ ನೈರುತ್ಯ ಮುಂಗಾರು ಕೇರಳಕ್ಕೆ ಆಗಮಿಸುವ ನಿರೀಕ್ಷೆ ಇದೆ. ನೈರುತ್ಯ ಮತ್ತು ಆಗ್ನೇಯ ಅರಬ್ಬಿ ಸಮುದ್ರ, ಲಕ್ಷ ದ್ವೀಪ, ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಮುಂಗಾರು ಮುಂದುವರಿಯಲು ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.
ಸಾಮಾನ್ಯವಾಗಿ ಜೂನ್ 1ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುತ್ತದೆ. ಆದರೆ ಈ ವರ್ಷ ಮೇ 26ಕ್ಕೆ ಪ್ರವೇಶಿಸಲಿದೆ ಎಂದು ಅಂದಾಜಿಸಲಾಗಿತ್ತು. ಇದೀಗ ಇನ್ನು ಎರಡು ಮೂರು ದಿನ ತಡವಾಗಿ ಮುಂಗಾರು ಆಗಮನವಾಗಲಿದೆ ಎಂದು ಹೇಳಲಾಗಿದೆ.

































