ಬೆಂಗಳೂರು:ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಬೃಹತ್ ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮೂವರು ಅಧಿಕಾರಿಗಳ ಮನೆ, ಕಚೇರಿ ಹಾಗೂ ಫಾರ್ಮ್ ಹೌಸ್‌ಗಳ ಮೇಲೆ 12 ತಂಡಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳು ಹಾಗೂ ಆಸ್ತಿ-ಪಾಸ್ತಿ ಸಂಬಂಧಿತ ಮಾಹಿತಿಗಳನ್ನು ಪರಿಶೀಲಿಸಲಾಗಿದೆ.
ದಾವಣಗೆರೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣ ನಾಯ್ಕ, NWKRTC ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ ಹಾಗೂ ಕೆಆರ್‌ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರ ಮನೆ, ಕಚೇರಿ ಮತ್ತು ಫಾರ್ಮ್ ಹೌಸ್‌ಗಳ ಮೇಲೆ ದಾಳಿ ನಡೆದಿದೆ. ಸಿದ್ದೇಶ್ವರ ಹೆಬ್ಬಾಳ ಅವರ ಮನೆಯಲ್ಲಿ ಅಪಾರ ಚಿನ್ನಾಭರಣ ಹಾಗೂ ನಗದು ಪತ್ತೆಯಾದ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಬೆಳಗಾವಿ, ಹುಬ್ಬಳ್ಳಿ ಮತ್ತು ದಾವಣಗೆರೆ ಸೇರಿ ವಿವಿಧ ಸ್ಥಳಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳ ಆಸ್ತಿ ಮತ್ತು ಹಣಕಾಸು ವ್ಯವಹಾರಗಳ ಕುರಿತು ಲೋಕಾಯುಕ್ತ ತಂಡಗಳು ತೀವ್ರ ಪರಿಶೀಲನೆ ನಡೆಸುತ್ತಿವೆ. ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

































