ಚಿತ್ರದುರ್ಗ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
1ನೇ ತರಗತಿಯಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ಆಸಕ್ತರು ರಾಜ್ಯ ವಿದ್ಯಾರ್ಥಿ ವೇತನ ಫೋರ್ಟಲ್‍ನ ಲಿಂಕ್ https://ssp.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸಿ, ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು ‘ಆಟೋ ರಿನ್ಯೂವಲ್’ ಎಂದು ಪರಿಗಣಿಸಲಾಗುವುದರಿಂದ ಇಂತಹ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಆದರೆ, ಕಳೆದ ವರ್ಷ ಅರ್ಜಿ ಸಲ್ಲಿಸಿಯೂ ವಿದ್ಯಾರ್ಥಿವೇತನ ಮಂಜೂರಾಗದವರು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ 1ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳು ಕಡ್ಡಾಯವಾಗಿ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಈ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಹಾಗೂ NPCI ಮ್ಯಾಪಿಂಗ್ ಸಕ್ರಿಯವಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ/ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
(AI ಚಿತ್ರ)































