ದಾವಣಗೆರೆ:ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ನೈರ್ಮಲ್ಯ ಕಾರ್ಮಿಕರ ಜೀವಕ್ಕೆ ರಕ್ಷಣೆ ನೀಡುವುದು ಮತ್ತು ಅವರಿಗೆ ಸುರಕ್ಷಿತ ಕೆಲಸದ ವಾತಾವರಣವನ್ನು ನಿರ್ಮಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ನಮಸ್ತೆ’ (NAMASTE) ಯೋಜನೆಯಡಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಮರ್ಥ್ ಶಾಮನೂರು ಅವರು ತಿಳಿಸಿದರು.
ಮಹಾನಗರ ಪಾಲಿಕೆ ಆವರಣದಲ್ಲಿ ಮಂಗಳವಾರ ನೈರ್ಮಲ್ಯ ಕಾರ್ಮಿಕರಿಗೆ ವೈಯಕ್ತಿಕ ಸುರಕ್ಷತಾ ಉಪಕರಣಗಳ (PPE Kits) ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮಾನವ ಚಾಲಿತ ಮಲಹೊರುವ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಮತ್ತು ಒಳಚರಂಡಿ ಸ್ವಚ್ಛತೆಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಯಾಂತ್ರೀಕೃತ ವ್ಯವಸ್ಥೆಯನ್ನು ಉತ್ತೇಜಿಸುವುದು ‘ನಮಸ್ತೆ’ ಯೋಜನೆಯ ಆಶಯವಾಗಿದೆ. ಅಪಾಯಕಾರಿ ಸಂದರ್ಭಗಳಲ್ಲಿ ಕಾರ್ಮಿಕರು ಯಾವುದೇ ಕಾರಣಕ್ಕೂ ಸುರಕ್ಷತಾ ಕವಚಗಳಿಲ್ಲದೆ ಕೆಲಸ ಮಾಡಬಾರದು. ವೈಯಕ್ತಿಕ ಸುರಕ್ಷತಾ ಉಪಕರಣಗಳ (PPE Kit) ಬಳಕೆಯನ್ನು ಕಡ್ಡಾಯಗೊಳಿಸುವ ಮೂಲಕ ನೈರ್ಮಲ್ಯ ಕಾರ್ಮಿಕರ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ದಾವಣಗೆರೆ ನಗರವು ರಾಜ್ಯದಲ್ಲಿ ಪ್ರಥಮ ಸ್ಥಾನ ಹಾಗೂ ದೇಶದಲ್ಲಿ 32ನೇ ಸ್ಥಾನ ಪಡೆದುಕೊಂಡಿರುವುದಕ್ಕೆ ಸ್ವಚ್ಛತಾ ಕಾರ್ಮಿಕರ ನಿರಂತರ ಶ್ರಮವೇ ಕಾರ̧ಣ ಮುಂದಿನ ವರ್ಷ ನಿಮ್ಮೆಲ್ಲರ ಸಹಕಾರದಿಂದ ಈ ಶ್ರೇಯಾಂಕವನ್ನು ಮತ್ತಷ್ಟು ಉತ್ತಮಪಡಿಸುವ ಗುರಿ ಹೊಂದಲಾಗಿದೆ ಎಂದರು.
ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಮಹಾಂತೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾರ್ಮಿಕರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳು ಮತ್ತು ‘ನಮಸ್ತೆ’ ಯೋಜನೆಯಡಿ ನೋಂದಣಿಯಾಗಿರುವ ಕಾರ್ಮಿಕರಿಗೆ ಸಿಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಪಿಪಿ 287 ಕಿಟ್ ಗಳು ಮತ್ತು 1000 ಕುಕ್ಕರ್ ಗಳನ್ನು ವಿತರಿಸಲಾಗುವುದು , ಸುರಕ್ಷತಾ ಕಿಟ್ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಅವರು ಕಾರ್ಮಿಕರಲ್ಲಿ ವಿನಂತಿಸಿದರು.
ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಸಿಬ್ಬಂದಿ ವರ್ಗ ಹಾಗೂ ನಗರದ ನೈರ್ಮಲ್ಯ ಕಾರ್ಮಿಕರು ಉಪಸ್ಥಿತರಿದ್ದರು.
































