ಡೆಹ್ರಾಡೂನ್ : ಉತ್ತರಾಖಂಡದ ಉತ್ತರಕಾಶಿಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ದಿಢೀರ್ ಪ್ರವಾಹ ಮತ್ತು ಖೀರ್ ಗಂಗಾ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಣ್ಣು ಕುಸಿತವಾಗಿ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ.
ಹಲವಾರು ಮನೆಗಳು, ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಉಕ್ಕಿ ಹರಿಯುವ ನೀರಿನಲ್ಲಿ ಕೊಚ್ಚಿ ಹೋಗಿವೆ. ಖೀರ್ ಗಂಗಾ ರೌದ್ರಾವತಾರಕ್ಕೆ ಇಡೀ ಊರೇ ಸರ್ವನಾಶವಾಗಿದ್ದು, 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಬೆಟ್ಟದ ಮೇಲಿನಿಂದ ಏಕಾಏಕಿ ನದಿಯಂತೆ ನೀರು ಹರಿದು ಬಂದು ಇಡೀ ಗ್ರಾಮವನ್ನೇ ಕೊಚ್ಚಿಕೊಂಡು ಹೋಗಿದೆ. ಈ ಭೀಕರ ಪ್ರವಾಹದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏಕಾಏಕಿ ಜಲಪ್ರಳಯ ಉಂಟಾದ ಪರಿಣಾಮ ಜನರು ಕಿರುಚಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ಸದ್ಯ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ದುರಂತದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಮೇಘಸ್ಫೋಟದಲ್ಲಿ ದೊಡ್ಡಮಟ್ಟದ ಹಾನಿಯಾಗಿರುವ ಮಾಹಿತಿ ಇದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.